Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 37

ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ

ದಾವೀದನ ಕೀರ್ತನೆ.

ಕೀರ್ತ 39; 73

ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ;

ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.

ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು;

ಹಸಿರು ಸಸಿಯಂತೆ ಬಾಡಿಹೋಗುವರು.

ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು;

ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.

ನೀನು ಯೆಹೋವನಲ್ಲಿ ಸಂತೋಷಿಸು;

ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;

ಆತನೇ ಅದನ್ನು ಸಾಗಿಸುವನು.

ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ,

ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;

ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.

ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು.

ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಕೆಡುಕರು ತೆಗೆದುಹಾಕಲ್ಪಡುವರು;

ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.

ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು;

ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.

ಆದರೆ ದೀನರು ದೇಶವನ್ನು ಅನುಭವಿಸುವರು;

ಅವರು ಮಹಾಸೌಖ್ಯದಿಂದ ಆನಂದಿಸುವರು.

ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ;

ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.

ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ;

ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.

ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು;

ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;

ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.

ದುಷ್ಟರ ತೋಳುಗಳು ಮುರಿದುಹೋಗುವವು;

ನೀತಿವಂತರನ್ನು ಯೆಹೋವನೇ ಉದ್ಧರಿಸುವನು.

ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ;

ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.

ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ;

ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ದುಷ್ಟರೋ ನಾಶವಾಗಿ ಹೋಗುವರು;

ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು.

ಅವರು ಹಬೆಯಂತೆ ತೋರಿ ಅಡಗಿಹೋಗುವರು.

ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;

ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.

ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು;

ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.

ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,

ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.

ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;

ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.

ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;

ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,

ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.

ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ;

ಅವನ ಸಂತತಿಯವರು ಆಶೀರ್ವಾದ ಹೊಂದುವರು.

ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು;

ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.

ಯೆಹೋವನು ನ್ಯಾಯವನ್ನು ಮೆಚ್ಚುವವನು;

ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು.

ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.

ನೀತಿವಂತರೋ ದೇಶವನ್ನು ಅನುಭವಿಸುವವರಾಗಿ,

ಅದರಲ್ಲಿ ಶಾಶ್ವತವಾಗಿ ವಾಸಿಸುವರು.

ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ,

ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.

ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು;

ಅವನು ಜಾರುವುದೇ ಇಲ್ಲ.

ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.

ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ;

ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.

ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು;

ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು;

ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.

ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ 1

ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

ತರುವಾಯ 2ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ,

ಅವನು ಇಲ್ಲದೆ ಹೋಗಿದ್ದನು,

ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.

ಒಳ್ಳೇ ನಡತೆಯುಳ್ಳವನನ್ನು ನೋಡು,

ಯಥಾರ್ಥನನ್ನು ಲಕ್ಷಿಸು;

ಶಾಂತನಿಗೆ ಸಂತಾನವೃದ್ಧಿ ಆಗುವುದು.

ದ್ರೋಹಿಗಳೆಲ್ಲರೂ ನಾಶವಾಗುವರು;

ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.

ನೀತಿವಂತರ ರಕ್ಷಣೆ ಯೆಹೋವನಿಂದಲೇ;

ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.

ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು;

ಅವರು ಆತನ ಆಶ್ರಿತರಾದುದರಿಂದ,

ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

Source notes (2)
  1. Footnote ಹಸಿರಾಗಿ ಬೆಳೆದ ಮರದಂತೆ ಅಂದರೆ ಲೆಬನೋನ್ ದೇಶದ ದೇವದಾರಿನಂತೆ.
  2. Footnote ಅಥವಾ ಅವನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.