Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 65

ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು.

ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ;

ಹರಕೆಗಳು ನಿನಗೆ ಸಲ್ಲುತ್ತವೆ.

ಪ್ರಾರ್ಥನೆಯನ್ನು ಕೇಳುವವನೇ,

ನರರೆಲ್ಲರೂ ನಿನ್ನ ಬಳಿಗೆ ಬರುವರು.

ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ.

ಆದರೆ ನಮ್ಮ ದೋಷಪರಿಹಾರಕನು ನೀನೇ.

ನಿನ್ನ ಅಂಗಳದಲ್ಲಿ ವಾಸಿಸುವವರಾಗಿ,

ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ,

ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು.

ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ

ನಮಗೆ ಸಂತೃಪ್ತಿಯಾಗಲಿ.

ನಮ್ಮ ರಕ್ಷಕನಾದ ದೇವರೇ,

ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ,

ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ.

ಭೂಮಿಯ ಎಲ್ಲಾ ಕಡೆಯವರ,

ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ

ನಂಬಿಕೆಗೆ ಆಧಾರನು ನೀನೇ.

ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು,

ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.

ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ,

ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.

ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ,

ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ;

ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.

ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ,

ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ.

ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.

ನೇಗಿಲಗೆರೆಗಳನ್ನು ತೇವಗೊಳಿಸಿ,

ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ;

ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.

ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ;

ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ

ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.

ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ;

ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.

ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ;

ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ;

ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.