Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 66

ದೇವರ ಮಹತ್ಕಾರ್ಯಗಳಿಗಾಗಿ ಸ್ತುತಿಸುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ.

ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.

ಆತನ ನಾಮದ ಮಹತ್ತನ್ನು ಕೀರ್ತಿಸಿರಿ;

ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.

ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ;

ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ,

ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ

ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ;

ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.

ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು;

ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು;

ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.

ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ;

ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ

ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ;

ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.

ಆತನು ನಮ್ಮನ್ನು ಜೀವದಿಂದುಳಿಸಿ,

ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.

ದೇವರೇ, ನಮ್ಮನ್ನು ಶೋಧಿಸಿದಿ;

ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.

ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ;

ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;

ಮನುಷ್ಯರು ನಮ್ಮ ತಲೆಗಳ ಮೇಲೆಯೇ,

ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ.

ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು;

ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.

ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.

ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ

ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.

ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು

ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು;

ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ

ಎಲ್ಲಾ ದೇವಭಕ್ತರೇ, ಬಂದು ಕೇಳಿರಿ;

ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.

ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.

ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ,

ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.

ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.

ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ;

ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ.

ದೇವರಿಗೆ ಸ್ತೋತ್ರವಾಗಲಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.